Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-13

ಉತ್ತರ ಕನ್ನಡದಲ್ಲಿ 147 ಅಪೌಷ್ಠಿಕ ಮಕ್ಕಳಿಗೆ ಚಿಕಿತ್ಸೆ ನೀಡಲು ಸೂಚನೆ

News Details

ಕಳೆದ ಮೂರು ತಿಂಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 147 ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದು ಗಮನಕ್ಕೆ ಬಂದಿದೆ. `ಈ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭೆ ನಡೆಸಿದ ಅವರು `ಎಲ್ಲಾ ಅಂಗನವಾಡಿಗಳ ವ್ಯಾಪ್ತಿಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಬೇಕು. ಅವರಿಗೆ ಆರೋಗ್ಯ ಇಲಾಖೆಯ ಮೂಲಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಯಾವುದೇ ಮಗು ಅಪೌಷ್ಠಿಕತೆಯಿಂದ ಬಳಲದಂತೆ ಎಚ್ಚರವಹಿಸಬೇಕು' ಎಂದು ಸೂಚಿಸಿದರು. `ಮಕ್ಕಳು ಸಂಪೂರ್ಣ ಆರೋಗ್ಯವಂತರಾಗುವವರೆಗೆ ನಿಗಾವಹಿಸುವುದರ ಜೊತೆಗೆ ಎಲ್ಲಾ ಮಕ್ಕಳ ಸಂಪೂರ್ಣ ವಿವರಗಳನ್ನು ಇಟ್ಟುಕೊಳ್ಳಬೇಕು' ಎಂದರು.

`ಮಕ್ಕಳು ಸಂಪೂರ್ಣ ಗುಣಮುಖರಾಗುವವರೆಗೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಮತ್ತು ಪೌಷ್ಠಿಕ ಆಹಾರ ಒದಗಿಸಬೇಕು. ವೈದ್ಯಾಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ನಿರಂತರವಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ತಪಾಸಣೆ ನಡೆಸಬೇಕು' ಎಂದು ಡೀಸಿ ಸೂಚಿಸಿದರು. `ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ಕುರಿತು ಕ್ರಮ ಜರುಗಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಅಂಗನವಾಡಿಗಳ ವ್ಯಾಪ್ತಿಯ ಸಂಬoಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮತ್ತು ತಹಶೀಲ್ದಾರ್‌ಗಳೊಂದಿಗೆ ಚರ್ಚಿಸಿ ಆ ಭಾಗದಲ್ಲಿ ಸರಕಾರಿ ಜಮೀನು ಲಭ್ಯವಿರುವ ಬಗ್ಗೆ ಪರಿಶೀಲಿಸಬೇಕು' ಎಂದು ಸೂಚಿಸಿದರು. `ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಪಾವತಿಸುವ ಸಹಾಯಧನವನ್ನು ನಿಗಧಿತ ಅವಧಿಯಲ್ಲಿ ಪಾವತಿಸಬೇಕು. ಬ್ಯಾಂಕ್ ಖಾತೆಯಲ್ಲಿ ಕಂಡು ಬರುವ ಸಮಸ್ಯೆಗಳ ಕುರಿತಂತೆ ಲೀಡ್ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ವಿಶೇಷ ಕ್ಯಾಂಪ್ ಆಯೋಜಿಸಿ ಬ್ಯಾಂಕಿ0ಗ್ ಕುರಿತ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು' ಎಂದು ತಿಳಿಸಿದರು.

`ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಕುರಿತಂತೆ ಗ್ರಾಮ ಮಟ್ಟದಲ್ಲಿ ನಿಗಧಿತವಾಗಿ ಸಭೆಗಳನ್ನು ನಡೆಸಬೇಕು. ಗ್ರಾಮ ಮತ್ತು ತಾಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಕಾವಲು ಸಮಿತಿಗಳು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು' ಎಂದರು. `ಸಾಂತ್ವನ ಯೋಜನೆಯ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಅಗತ್ಯ ನೆರವು, ಆಪ್ತ ಸಮಾಲೋಚನೆ ಒದಗಿಸುವುದರ ಜೊತೆಗೆ ಅವರಿಗೆ ಸ್ವಯಂ ಉದ್ಯೋಗ ಮತ್ತು ಕೌಶಲ್ಯ ತರಬೇತಿಗಳನ್ನು ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು. ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಒದಗಿಸಬೇಕು. ಸಾಂತ್ವನ ಯೋಜನೆಯ ಕುರಿತಂತೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ತಾಲೂಕು ಮಹಿಳಾ ಸ್ವ ಸಹಾಯ ಸಂಘದ ಸಭೆಗಳಲ್ಲಿ ಅರಿವು ಮೂಡಿಸಬೇಕು' ಎಂದರು.

ಕೌಟುoಬಿಕ ಹಿಂಸೆಯಿoದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥಪಡಿಸಿ ನೊಂದ ಮಹಿಳೆಗೆ ನ್ಯಾಯ ಒದಗಿಸುವಂತೆ ತಿಳಿಸಿದರು. `ಒನ್ ಸ್ಟಾಫ್ ಸೆಂಟರ್ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ವೈದ್ಯಕೀಯ, ಪೊಲೀಸ್,ಕಾನೂನು ಸೇರಿದಂತೆ ಎಲ್ಲಾ ರೀತಿಯ ಸಮಗ್ರ ನೆರವು ಒದಗಿಸಬೇಕು' ಎಂದು ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರುಪಾಕ್ಷ ಗೌಡ ಪಾಟೀಲ್ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.